KarnatakaLatest News

ಬಾಲ್ಯವಿವಾಹ ನಿರ್ಮೂಲನೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯ ತಡೆಗಟ್ಟುವ ಕುರಿತು ರಾಜ್ಯಮಟ್ಟದ ಸಮಾಲೋಚನಾ ಸಭೆ

ಬಾಲ್ಯವಿವಾಹವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದರ ಜೊತೆಗೆ ಮಕ್ಕಳ ಮೇಲಿನ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ವಿಷಯಗಳ ತಡೆಗಟ್ಟುವಿಕೆ ಹಾಗೂ ಮಕ್ಕಳ ರಕ್ಷಣೆಯನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ನ್ಯಾಯಾಂಗ ಅಕಾಡೆಮಿ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಬಾಲ ನ್ಯಾಯ ಸಮಿತಿ ಮತ್ತು ಪೋಕ್ಸೋ ಸಮಿತಿಗಳ ಸಹಯೋಗದಲ್ಲಿ, ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ ಮತ್ತು ಇಂಡಿಯಾ ಚೈಲ್ಡ್ ಪ್ರೊಟೆಕ್ಷನ್, ನವದೆಹಲಿ ಇವರ ಸಹಭಾಗಿತ್ವದಲ್ಲಿ ದಿನಾಂಕ 21.11.2026ರಂದು ಬೆಂಗಳೂರಿನ ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ರಾಜ್ಯಮಟ್ಟದ ಸಮಾಲೋಚನಾ ಸಭೆಯನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀಮತಿ ನ್ಯಾಯಮೂರ್ತಿ ಅನು ಶಿವರಾಮನ್ ಅವರು ಉದ್ಘಾಟಿಸಿದರು. ಅವರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಅಧ್ಯಕ್ಷರು ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಬಾಲ ನ್ಯಾಯ ಮತ್ತು ಪೋಕ್ಸೋ ಸಮಿತಿಯ ಅಧ್ಯಕ್ಷರಾದ ಶ್ರೀ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ ಸಂಸ್ಥೆಯ ರಾಷ್ಟ್ರೀಯ ಕಾರ್ಯದರ್ಶಿ ಶ್ರೀಮತಿ ಸಂಪೂರ್ಣ ಬೆಹುರಾ, ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರಾದ ಶ್ರೀಮತಿ ನಿಶಾ ಜೇಮ್ಸ್, ಐಪಿಎಸ್ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಭೆಯಲ್ಲಿ ಬಾಲ್ಯವಿವಾಹದಿಂದ ಮಕ್ಕಳ ಶಿಕ್ಷಣ, ಆರೋಗ್ಯ, ಮಾನಸಿಕ ಬೆಳವಣಿಗೆ ಹಾಗೂ ಭವಿಷ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಚರ್ಚಿಸಲಾಯಿತು. ಬಾಲ್ಯವಿವಾಹ ತಡೆಗಟ್ಟಲು ಕಾನೂನುಗಳ ಪರಿಣಾಮಕಾರಿ ಅನುಷ್ಠಾನ, ಮಕ್ಕಳ ಮೇಲಿನ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯ ತಡೆ, ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಾಣ ಹಾಗೂ ಸಂತ್ರಸ್ತ ಮಕ್ಕಳಿಗೆ ಅಗತ್ಯ ಕಾನೂನು ನೆರವು ಮತ್ತು ರಕ್ಷಣಾ ಸೇವೆಗಳನ್ನು ಒದಗಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.
ಮಕ್ಕಳ ರಕ್ಷಣೆಗೆ ಸಂಬಂಧಿಸಿದ ವಿವಿಧ ಇಲಾಖೆಗಳು, ಕಾನೂನು ಜಾರಿ ಸಂಸ್ಥೆಗಳು, ಕಾನೂನು ಸೇವಾ ಪ್ರಾಧಿಕಾರಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ನಡುವೆ ಸಮನ್ವಯ ಮತ್ತು ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಒತ್ತಿಹೇಳಲಾಯಿತು. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪ್ರತಿಯೊಂದು ಇಲಾಖೆಯೂ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವುದು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯವೆಂದು ಅಭಿಪ್ರಾಯ ವ್ಯಕ್ತವಾಯಿತು.
ಕಾರ್ಯಕ್ರಮದ ಅಂಗವಾಗಿ ಬಾಲ್ಯವಿವಾಹ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸುವ ಹಾಡುಗಳನ್ನು ಬಿಡುಗಡೆ ಮಾಡಲಾಯಿತು.
ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ನಿರ್ಮೂಲನೆ ಮತ್ತು ಮಕ್ಕಳ ಮೇಲಿನ ಎಲ್ಲಾ ರೀತಿಯ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಮತ್ತು ಸಂಸ್ಥೆಗಳು ಒಗ್ಗೂಡಿ ಕಾರ್ಯನಿರ್ವಹಿಸುವ ಮೂಲಕ ಮಕ್ಕಳಿಗೆ ಸುರಕ್ಷಿತ ಹಾಗೂ ಘನತೆಯುತ ಬಾಲ್ಯವನ್ನು ಖಾತರಿಪಡಿಸುವುದು ಈ ರಾಜ್ಯಮಟ್ಟದ ಸಮಾಲೋಚನಾ ಸಭೆಯ ಪ್ರಮುಖ ಆಶಯವಾಗಿದೆ.

 

Related Articles

Leave a Reply

Your email address will not be published. Required fields are marked *

Back to top button